ಚಲಿಸುತ್ತಿದ್ದ ಬೈಕ್ ಮೇಲೆ ಬೃಹತ್ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮತ್ತೋರ್ವ ಯುವಕನೂ ಮೃತ್ಯು

  June 10,2024
news-banner
ಬೆಳಗಾವಿ: ಬೆಳಗಾವಿಯಲ್ಲಿ ಬೃಹತ್ ಮರ ಬಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. 

ಭಾನುವಾರ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ಚಲಿಸುತ್ತಿದ್ದ ಬೈಕ್ ಮೇಲೆ ಬೃಹತ್ ಮರ ಬಿದ್ದು ಬೈಕ್​ನಲ್ಲಿದ್ದ ಮೂವರಿಗೆ ಗಾಯಗಳಾಗಿದ್ದವು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಮೂವರ ಪೈಕಿ ಇಬ್ಬರು ಮೃತಪಟ್ಟಿದ್ದು, ಮತ್ತೋರ್ವ ಗಾಯಾಳುವಿಗೆ ಚಿಕಿತ್ಸೆ ಮುಂದುವರೆದಿದೆ.

ಭಾನುವಾರ ಕರ್ಲೆ ಗ್ರಾಮದ ಸೋಮನಾಥ್ ಮುಚ್ಚಂಡಿಕರ್(21) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ರಾತ್ರಿ ವಿಠ್ಠಲ್ ತಳವಾರ (20) ಕೂಡ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. 

ಘಟನೆಯಲ್ಲಿ ಗಂಭೀರ ಗಾಯಗೊಂಡ ಇನ್ನೋರ್ವ ಯುವಕ ಸ್ವಪ್ನಿಲ್ ದೇಸಾಯಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.

ಈ ಮೂವರು ಒಂದೇ ಬೈಕ್​ನಲ್ಲಿ ಬರುತ್ತಿದ್ದಾಗ ಇವರ ಮೇಲೆ ಬೃಹತ್ ಮರ ಬಿದ್ದಿದೆ ಎಂದು ತಿಳಿದು ಬಂದಿದೆ.

Leave Your Comments