ಫೇಸ್​​ಬುಕ್ ವೀಡಿಯೊ ಮಾಡಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣು

  April 18,2025
news-banner
ಆನೇಕಲ್: ಆನೇಕಲ್‌ ಪಟ್ಟಣದ ಎಸ್.ವಿ.ಎಂ ಸ್ಕೂಲ್ ಬಳಿ ಬಿಜೆಪಿ ಕಾರ್ಯಕರ್ತರೊಬ್ಬರು ಫೇಸ್​​ಬುಕ್ ವೀಡಿಯೊ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಬೇಲೂರು (35) ಎಂದು ತಿಳಿದು ಬಂದಿದೆ.

ಫೇಸ್​​ಬುಕ್ ವೀಡಿಯೊ ಮಾಡಿ ಹಲವರ ಹೆಸರುಗಳನ್ನು ಪ್ರಸ್ತಾಪಿಸಿದ ಅವರು, ಆ ನಂತರ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ತಮ್ಮ ಸಾವಿಗೆ ಇವರೇ ಕಾರಣ ಎಂದು ಹಲವರನ್ನು ಹೆಸರಿಸಿರುವ ಅವರು, ಆ ಪೈಕಿ ಕಿರಣ್ ಎಂಬಾತನ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಸಮಂದೂರ್ ಕಿರಣ್, ಗೋಕುಲ್ ಫ್ಯಾಷನ್ ಹರೀಶ್​​, ಭಾಸ್ಕರ್, ನಾರಾಯಣಪ್ಪ, ದೊಡ್ಡಹಾಗಡೆ ಮಧುಗೌಡ, ಸರವಣ ಇವರೇ ನನ್ನ ಸಾವಿಗೆ ಕಾರಣ. ಯಾರನ್ನು ಬಿಟ್ಟರೂ ಕಿರಣ್​​​​​ನನ್ನು ದಯವಿಟ್ಟು ಬಿಡಬೇಡಿ. ಕಿರಣ್ ಹಲವು ಹೆಣ್ಣು ಮಕ್ಕಳಿಗೆ ಫೋನ್ ಮಾಡಿ ಕಿರಿಕುಳ ನೀಡುತ್ತಿದ್ದಾನೆ. ಕಿರಣ್​​ ಮಾಡಿರುವ ಇಂತಹ ಕೆಲಸಗಳೆಲ್ಲಾ ನನ್ನ ಮೇಲೆ ಬಂದಿವೆ. ಹಣದ ವಿಚಾರವಾಗಿ ಮಾತುಕತೆಗೆ ಕರೆಸಿಕೊಂಡು ಹಲ್ಲೆ ನಡೆಸಿದ್ದಾರೆ ಎಂದು ಫೇಸ್​​ಬುಕ್ ವೀಡಿಯೊದಲ್ಲಿ ಪ್ರವೀಣ್ ಗೌಡ ಆರೋಪಿಸಿದ್ದಾರೆ.

ಆನೇಕಲ್ ಬಿಜೆಪಿ ಮಂಡಲ ಅಧ್ಯಕ್ಷ ಮುನಿರಾಜುಗೌಡ ವಿರುದ್ಧವೂ ಆರೋಪ ಮಾಡಲಾಗಿದೆ. ಬಿಜೆಪಿ ಮುಖಂಡ ನಾಯನಹಳ್ಳಿ ಮುನಿರಾಜು ಮನೆಗೆ ಕರೆದಿದ್ದರು. ಆ ಸಂದರ್ಭದಲ್ಲಿ ಆನೇಕಲ್ ಕೌನ್ಸಿಲರ್ ಭಾಗ್ಯಮ್ಮ ಹಾಗೂ ಆಕೆಯ ಪತಿ ಶ್ರೀನಿವಾಸ್ ಇದ್ದರು. ಏಕಾಏಕಿ ಹತ್ತಾರು ಮಂದಿಯನ್ನು ಕರೆಸಿಕೊಂಡಿದ್ದ ಭಾಗ್ಯಮ್ಮ ಶ್ರೀನಿವಾಸ್, ಮೊಬೈಲ್ ಕಿತ್ತುಕೊಂಡು 2 ಗಂಟೆಗಳ ಕಾಲ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಮನಸೋ ಇಚ್ಛೆ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆಂದು ಪ್ರವೀಣ್ ಆರೋಪಿಸಿದ್ದಾರೆ.

‘‘ನಾನು ಸತ್ತ ಮೇಲೆ ನನ್ನ ದೇಹದ ಮೇಲಿರುವ ಗಾಯದ ಗುರುತುಗಳನ್ನು ಪರಿಶೀಲಿಸಿ. ಪೊಲೀಸರು ನನಗೆ ನ್ಯಾಯ ಕೊಡಿಸಬೇಕು’’ ಎಂದು ಪ್ರವೀಣ್ ಮನವಿ ಮಾಡಿದ್ದಾನೆ. 

ಪ್ರವೀಣ್ ಗುರುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನಾ ಸ್ಥಳಕ್ಕೆ ಆನೇಕಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಆನೇಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

Leave Your Comments